ವಿದ್ಯಾರ್ಥಿ ವೇತನಕ್ಕೆ ಅಂಟದ ಕೊರೋನಾ ಕಂಟಕ: ವಿದ್ಯಾರ್ಥಿ ವೇತನ ತಡೆಯದಂತೆ ಸಿಎಂ ಆದೇಶ
ಕೊರೋನಾ ವೈರಸ್ ಇಂದಾಗಿ ಇಡೀ ದೇಶವೇ ಲಾಕ್ ಡೌನ್ ಆದಂತಹ ಸಂದರ್ಭದಲ್ಲಿ ಸರ್ಕಾರದಿಂದ ಕೆಲವು ಸೇವೆಗಳನ್ನು ಹೊರತು ಪಡಿಸಿ ಎಲ್ಲಾ ಸೇವೆಗಳು ಸ್ಥಗಿತವಾಗಿವೆ. ಇದರಿಂದ ಅನೇಕರಿಗೆ ಬಹಳಷ್ಟು ತೊಂದರೆಯಾಗಿತ್ತು ಆದರೆ ಈ ಒಂದು ಪರಿಸ್ಥಿತಿ ವಿದ್ಯಾರ್ಥಿಗಳಿಗೆ ಆಗಬಾರದು ಎಂದು ಈ ಯೋಜನೆಯನ್ನು ಮಾತ್ರ ಸ್ಥಗಿತಗೊಳಿಸಿಲ್ಲ. ಅಷ್ಟಕ್ಕೂ ಆ ಯೋಜನೆ ಏನು ಗೊತ್ತಾ..?
ಕೊರೊನಾ ವೈರಸ್, ಲಾಕ್‌ಡೌನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸರ್ಕಾರದ ಬಹುತೇಕ ಯೋಜನೆಗಳು ಸ್ಥಗಿತವಾಗಿವೆ. ರಾಜ್ಯ ಹಾಗೂ ಕೇಂದರ ಸರ್ಕಾರಗಳಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ. ಹೀಗಾಗಿ ಅಭಿವೃದ್ಧಿ ಯೋಜನೆಗಳು ಸಂಪೂರ್ಣವಾಗಿ ನಿಂತಿವೆ. ಆದರೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಿದ್ದರೂ ಯಾವುದೇ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚನೆ
ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವೇತನ ನಿಲ್ಲಿಸದೆ ಕಾಲಕಾಲಕ್ಕೆ ತಕ್ಕಂತೆ ಬಿಡುಗಡೆ ಮಾಡಿ ಎಂದು ಆದೇಶ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2019-20ನೇ ಸಾಲಿನಲ್ಲಿ ಶೇ. 97 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದಿದ್ದವರಲ್ಲಿ ಇಬ್ಬರು ಐಎಎಸ್, ಇಬ್ಬರು ಐಪಿಎಸ್ ಹಾಗೂ 13 ಅಭ್ಯರ್ಥಿಗಳು ಐಆರ್‌ಎಸ್ ಸೇವೆಗೆ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಸುಮಾರು 268 ಅಭ್ಯರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸರ್ಕಾರಿ ಸೇವೆಗಳಳಲ್ಲಿ ಉದ್ಯೋಗ ಆರಂಭಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.